ಕೋಲ್ಕತ್ತಾದಲ್ಲಿ ಇತ್ತೀಚೆಗೆ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಖಂಡಿಸಿ, ನಾಳೆ ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರ ಮಾಡಲಿದ್ದಾರೆ.
ಈಗಾಗಲೇ ಸೋಮವಾರದಂದು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಹೊರರೋಗಿ ವಿಭಾಗಗಳು ಮತ್ತು ತುರ್ತು ರಹಿತ ಶಸ್ತ್ರಚಿಕಿತ್ಸಾ ಆರೋಗ್ಯ ಸೇವೆಗಳಿಗೆ ಹೊಡೆತ ಬಿದ್ದಿದೆ.
Kolkata Doctor Rape Murder Case
ಭಾರತೀಯ ವೈದ್ಯಕೀಯ ಸಂಘವು ಶನಿವಾರ ಅಂದರೆ 17 ರಿಂದ ಆಗಸ್ಟ್ 18ರ ಭಾನುವಾರ ಬೆಳಗ್ಗೆ 6 ಗಂಟೆ ವರೆಗೆ ದೇಶಾದ್ಯಂತ ಸರ್ಕಾರಿ, ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳಲ್ಲಿ ಎಲ್ಲಾ ಒಪಿಡಿಗಳು ಮತ್ತು ಶಸ್ತ್ರಚಿಕಿತ್ಸೆಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿತು. ಎಲ್ಲಾ ಅಗತ್ಯ ಸೇವೆಗಳನ್ನು ನಿರ್ವಹಿಸಲಾಗುವುದು. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುವುದು, ಒಪಿಡಿಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಐಎಂಎ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಏನಿದು ಘಟನೆ..?
ಕಳೆದ ಶುಕ್ರವಾರ ಬೆಳಗ್ಗೆ ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ 31 ವರ್ಷದ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಲಾಗಿದೆ.
ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆಗೂ ಮುನ್ನ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ.